ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಬುಧವಾರ) ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ನಕ್ಸಲ್ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
'ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ಜಿಲ್ಲಾ ಮೀಸಲು ರಕ್ಷಣಾ ಪಡೆಯ (ಡಿಆರ್ಜಿ) ಇಬ್ಬರು ಯೋಧರು ಗಾಯಗೊಂಡಿದ್ದಾರೆ' ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಯಾದವ್ ಮಾಹಿತಿ ನೀಡಿದ್ದಾರೆ.
ಈಚೆಗೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಅಂಗನವಾಡಿಯ ಸಹಾಯಕಿ ಲಕ್ಷ್ಮಿ ಪದಮ್ (45) ಎಂಬವರನ್ನು ನಕ್ಸಲರು ಹತ್ಯೆ ಮಾಡಿದ್ದರು. ಮಹಿಳೆಯು ನಕ್ಸಲರ ಚಲನವಲನ ಕುರಿತು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು ಎಂಬ ಅನುಮಾನದಿಂದ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.
ಈ ಹತ್ಯೆಯೂ ಸೇರಿದಂತೆ 7 ಜಿಲ್ಲೆಗಳನ್ನು ಒಳಗೊಂಡಿರುವ ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಈ ವರ್ಷ ನಕ್ಸಲರು ಒಟ್ಟು 60 ಮಂದಿಯನ್ನು ಹತ್ಯೆ ಮಾಡಿದ್ದಾರೆ.