ನವದೆಹಲಿ: 'ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆ - 1991'ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಪೀಠವು ಡಿಸೆಂಬರ್ 12ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
ರಾಮ ಜನ್ಮಭೂಮಿ ಹೋರಾಟವು ತೀವ್ರವಾಗಿದ್ದ ಸಂದರ್ಭದಲ್ಲಿ ಪಿ.ವಿ. ನರಸಿಂಹರಾವ್ ನೇತೃತ್ವದ ಸರ್ಕಾರವು ಈ ಕಾಯ್ದೆಯನ್ನು ರೂಪಿಸಿತ್ತು. ದೇಶದ ಧಾರ್ಮಿಕ ಸ್ಥಳಗಳ ಸ್ವರೂಪವನ್ನು 1947ರ ಆಗಸ್ಟ್ 15ರಂದು ಹೇಗಿತ್ತೋ ಅದೇ ರೀತಿಯಲ್ಲಿ ಕಾಯ್ದುಕೊಳ್ಳುವುದು ಈ ಕಾಯ್ದೆಯ ಉದ್ದೇಶ.
ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೂ ಒಳಗೊಂಡಿರುವ ಪೀಠವು ಡಿಸೆಂಬರ್ 12ರ ಮಧ್ಯಾಹ್ನ 3.30ಕ್ಕೆ ವಿಚಾರಣೆಗೆ ಎತ್ತಿಕೊಳ್ಳುವ ಸಾಧ್ಯತೆ ಇದೆ.
ಮಸೀದಿ, ದರ್ಗಾಗಳಲ್ಲಿ ಸಮೀಕ್ಷೆ ನಡೆಸಬೇಕು ಎಂಬ ಕೋರಿಕೆ ಇರುವ ಸರಿಸುಮಾರು 20 ಅರ್ಜಿಗಳು ದೇಶದ ಹಲವೆಡೆ ಸಲ್ಲಿಕೆ ಆಗಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದು ಮಹತ್ವ ಪಡೆಯುತ್ತದೆ.
1991ರ ಕಾಯ್ದೆಗೆ ತಡೆ ಇಲ್ಲದಿದ್ದರೂ, ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದಂತೆ ದೇಶದ ಬೇರೆ ಬೇರೆ ನ್ಯಾಯಾಲಯಗಳಲ್ಲಿ ನಡೆದಿರುವ ವಿಚಾರಣೆಗಳಿಗೆ ಪೂರ್ತಿಯಾಗಿ ತಡೆ ನೀಡಲು ಸಾಧ್ಯವಿಲ್ಲ ಎಂದು 2023ರ ಜುಲೈನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು.
ಧಾರ್ಮಿಕ ಸ್ಥಳವೊಂದರ ಧಾರ್ಮಿಕ ಸ್ವರೂಪವನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಪೂಜಾ ಸ್ಥಳಗಳ ಕಾಯ್ದೆಯು ಅಡ್ಡಿಯಾಗುವುದಿಲ್ಲ ಎಂದು ಕೋರ್ಟ್, ಕಾಶಿ ವಿಶ್ವನಾಥ - ಗ್ಯಾನವಾಪಿ ಮಸೀದಿ ವಿವಾದದ ವಿಚಾರಣೆ ವೇಳೆ ಸ್ಪಷ್ಟಪಡಿಸಿತ್ತು.