ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಮಾತುಕತೆ ನಡೆಸಿದರು.
ರಕ್ಷಣೆ, ವ್ಯಾಪಾರ ಹಾಗೂ ಹೂಡಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ-ಶ್ರೀಲಂಕಾ ನಡುವೆ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಉಭಯ ನಾಯಕರು ಚರ್ಚಿಸಿದರು.
ದಿಸ್ಸನಾಯಕೆ ಅವರು ಭಾನುವಾರ ದೆಹಲಿಗೆ ಆಗಮಿಸಿದ್ದು, ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಸ್ವಾಗತ ನೀಡಲಾಗಿದೆ. ಸೆಪ್ಟೆಂಬರ್‌ನಲ್ಲಿ ಶ್ರೀಲಂಕಾದ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅವರ ಮೊದಲ ವಿದೇಶ ಪ್ರವಾಸ ಇದಾಗಿದೆ.
ನಿನ್ನೆ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ.
ಭಾರತ ಮತ್ತು ಶ್ರೀಲಂಕಾ ನಡುವೆ ಹೂಡಿಕೆ ಮತ್ತು ವಾಣಿಜ್ಯ ಸಂಪರ್ಕಗಳನ್ನು ಉತ್ತೇಜಿಸಲು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ದಿಸ್ಸನಾಯಕೆ ಅವರು ಪಾಲ್ಗೊಳ್ಳಲಿದ್ದಾರೆ. ಬಳಿಕ ಬೋಧಗಯಾಕ್ಕೆ ಭೇಟಿ ನೀಡಲಿದ್ದಾರೆ.