ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
ಮುಂಬೈನ ವಿಶ್ವ ಹಿಂದೂ ಆರ್ಥಿಕ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ದೇಶದ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದ್ದು, 'ಮೋದಿ ಅವರ ಹಿಂದೂ ಬೆಳವಣಿಗೆ ದರ ಮಾದರಿ' ವಿಶ್ವಕ್ಕೆ ಹೊಸ ದಿಕ್ಕನ್ನು ತೋರಿಸುತ್ತದೆ' ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ ಕೂಡ ಈ ಬೆಳವಣಿಗೆಯ ಭಾಗವಾಗಲು ಮತ್ತು 2028ರ ವೇಳೆಗೆ ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಲು ಹಾತೊರೆಯುತ್ತದೆ. ರಾಜ್ಯದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ, ಹಸಿರು ಶಕ್ತಿ (ಗ್ರೀನ್ ಎನರ್ಜಿ) ಮತ್ತು ನೀರಿನ ಸಂರಕ್ಷಣೆ ಕ್ಷೇತ್ರಗಳಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಮುಂಬರುವ ವರ್ಷಗಳಲ್ಲಿ ಮುಂಬೈ ದೇಶದ 'ಫಿನ್‌ಟೆಕ್' ರಾಜಧಾನಿಯಾಗಲಿದೆ ಎಂದು ಫಡಣವೀಸ್ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಸುಸ್ಥಿರ ಅಭಿವೃದ್ಧಿಯಲ್ಲಿ ನಂಬಿಕೆ ಹೊಂದಿದ್ದಾರೆ. ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ಹೊರತಾಗಿ ಸಾಂಸ್ಕೃತಿಕ ಮತ್ತು ಸಾಮಾಜಿಕ ಪ್ರಗತಿಗೂ ಶ್ರಮ ವಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.