ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಬಾಂಗ್ಲಾದೇಶದ ಐವರು ಮಹಿಳೆಯರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಪೊಲೀಸರು ಭಿವಂಡಿಯ ಚಾಲ್ ಪ್ರದೇಶದಲ್ಲಿ ದಾಳಿ ನಡೆಸಿದ್ದು, ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶದ ಮಹಿಳೆಯರನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯರು 36ರಿಂದ 50 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದೆ. ಭಾರತದಲ್ಲಿ ನೆಲೆಸಲು ಯಾವುದೇ ನಿರ್ದಿಷ್ಟ ದಾಖಲೆಗಳು ಇಲ್ಲದ ಕಾರಣ ಅವರನ್ನು ಬಂಧಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ವಿದೇಶಿ ಪ್ರಜೆಗಳ ಕಾಯಿದೆ ಮತ್ತು ಭಾರತೀಯ ಪಾಸ್‌ಪೋರ್ಟ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಹಿಳೆಯರಿಗೆ ಬಾಡಿಗೆ ಮನೆ ನೀಡಿದ್ದ ವ್ಯಕ್ತಿಯನ್ನೂ 'ಆರೋಪಿ' ಎಂದು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.