ಚೆನ್ನೈ: ದೇಶದಲ್ಲಿ ಚುನಾವಣಾ ನಿಯಮಾವಳಿಗೆ ಅಸಮರ್ಪಕ ತಿದ್ದುಪಡಿಯನ್ನು ಜಾರಿಗೆ ತರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದ್ದು, ಇದು ಪ್ರಜಾಪ್ರಭುತ್ವದ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳ ಮೇಲಿನ ದಾಳಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕಳವಳ ವ್ಯಕ್ತಪಡಿಸಿದ್ದಾರೆ.
ಒಂದು ದೇಶ ಒಂದು ಚುನಾವಣೆ ನೀತಿ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರಜಾಪ್ರಭುತ್ವದ ಪಾರದರ್ಶಕತೆಯನ್ನು ನಾಶಪಡಿಸುವ ಉದ್ದೇಶದಿಂದಾಗಿ ಈ ತಿದ್ದುಪಡಿಯನ್ನು ತರಲು ಬಿಜೆಪಿ ಸರ್ಕಾರ ಮುಂದಾಗಿದೆ. ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ತಿಳಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಚುನಾವಣಾ ಬೂತ್‌ಗಳಲ್ಲಿ ಅಳವಡಿಸಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸುವಂತೆ ಹೈಕೋರ್ಟ್ ಇತ್ತೀಚೆಗೆ ನಿರ್ದೇಶನ ನೀಡಿತ್ತು. ಇದರ ಪರಿಣಾಮವಾಗಿಯೇ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಚುನಾವಣಾ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯಲು ಉದ್ದೇಶದಿಂದ ಕೇಂದ್ರ ಸರ್ಕಾರ ಈ ತಿದ್ದುಪಡಿಯನ್ನು ತರಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಆತಂಕ ಮೂಡಿಸಿದೆ. ಪ್ರಧಾನಿ ಮೋದಿಯ ಸರ್ಕಾರದ ಒತ್ತಡಕ್ಕೆ ಚುನಾವಣಾ ಆಯೋಗ ಮಣಿದಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವಂತೆ ಎಲ್ಲಾ ಪಕ್ಷಗಳಿಗೂ ಮನವಿ ಮಾಡುತ್ತೇನೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.