ದಿಬ್ರುಗಢ: ಅಸ್ಸಾಂನಲ್ಲಿ ಈ ವರ್ಷದ ಹ್ಯೂಮನ್ ಮೆಟಾನ್ಯೂಮೋವೈರಸ್ (ಎಚ್‌ಎಂಪಿವಿ) ಮೊದಲ ಪ್ರಕರಣ ಪತ್ತೆಯಾಗಿದ್ದು, 10 ತಿಂಗಳ ಮಗುವಿನಲ್ಲಿ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಎಎಂಸಿಎಚ್) ಮಗುವನ್ನು ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.
ನಾಲ್ಕು ದಿನಗಳ ಹಿಂದೆ ಶೀತ ಸಂಬಂಧಿ ರೋಗಲಕ್ಷಣದೊಂದಿಗೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿಗೆ ಎಚ್‌ಎಂಪಿವಿ ಸೋಂಕು ತಗುಲಿರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಎಚ್‌ಎಂಪಿವಿ ವೈರಾಣು ಸಾಮಾನ್ಯವಾಗಿ ಕಂಡುಬರುತ್ತಿದ್ದು, ಭಯ-ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಈ ಋತುವಿನ ಮೊದಲ ಪ್ರಕರಣ ಇದಾಗಿದೆ. 2014ರಿಂದ ದಿಬ್ರುಗಢ ಜಿಲ್ಲೆಯಲ್ಲಿ 110 ಎಚ್‌ಎಂಪಿವಿ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಪ್ರತಿ ವರ್ಷ ಎಚ್‌ಎಂಪಿವಿ ಪ್ರಕರಣ ಪತ್ತೆಯಾಗುತ್ತಿದ್ದು, ಹೊಸದೇನೂ ಅಲ್ಲ ಎಂದು ಅವರು ತಿಳಿಸಿದ್ದಾರೆ.