ಕೋಟಾ: ಒಡಿಶಾದ ಮೂಲದ 18 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಇಲ್ಲಿನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ ವಿಜ್ಞಾನ ನಗರ ಪ್ರದೇಶದ ಅಂಬೇಡ್ಕರ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ಕೊಠಡಿಯಲ್ಲಿ ಯಾವುದೇ ಮರಣ ಪತ್ರ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಅಭಿಜಿತ್ ಗಿರಿ (18) ಆತ್ಮಹತ್ಯೆಗೆ ಶರಣಾದವರು. ಇವರು 2024ರ ಏಪ್ರಿಲ್ ನಿಂದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದರು.
ರಾತ್ರಿ 8 ಗಂಟೆ ಸುಮಾರಿಗೆ ಮೆಸ್ ಕೆಲಸಗಾರ ಅಭಿಜಿತ್ ಅವರ ಕೋಣೆಗೆ ಊಟ ನೀಡಲು ಹೋದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಷ್ಟು ಕೂಗಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ, ಮೆಸ್ ಕೆಲಸಗಾರ ಮತ್ತು ಹಾಸ್ಟೆಲ್‌ನಲ್ಲಿನ ಇತರರು ಬಾಗಿಲು ಒಡೆದು ನೋಡಿದಾಗ ಆತ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ ಎಂದು ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಲಾಲ್ ಸಿಂಗ್ ತನ್ವಾರ್ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೇ ಘಟನೆ ಸಂಬಂಧ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಾಸ್ಟೆಲ್‌ಗಳಲ್ಲಿ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಸೀಲಿಂಗ್ ಫ್ಯಾನಿಗೆ ಆತ್ಮಹತ್ಯೆ ತಡೆಗಟ್ಟುವ ಸಾಧನವನ್ನು ಅಳವಡಿಸುವುದನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಆದರೆ, ಈ ಹಾಸ್ಟೆಲ್ ಕೊಠಡಿಯಲ್ಲಿ ಸಾಧನವನ್ನು ಅಳವಡಿಸಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೊಠಡಿಯಿಂದ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳ ಪ್ರಮುಖ ಕೇಂದ್ರವಾಗಿರುವ ಕೋಟಾದಲ್ಲಿ ಈ ವರ್ಷ (2025)ರಲ್ಲಿ ನಡೆದ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. 2024ರಲ್ಲಿ 17 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದವು.