ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಸೀತಾಪುರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು (ಗುರುವಾರ) ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧನದ ಬಳಿಕ ಭಾರಿ ಬಿಗಿ ಭದ್ರತೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ 'ಎನ್‌ಡಿಟಿವಿ' ವರದಿ ಮಾಡಿದೆ.
ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾಥೋಡ್ ವಿರುದ್ಧ ಜನವರಿ 17 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಥೋಡ್ ಅವರು ಸೀತಾಪುರದ ಎಂಪಿಎಂಎಲ್‌ಎ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದಿದ್ದರು. ಆದರೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಜನವರಿ 23ರಂದು ತಿರಸ್ಕರಿಸಿತ್ತು.
ಬಳಿಕ ಅವರು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಲಖನೌ ಪೀಠ ಕೂಡ ಬುಧವಾರ ಅವರ ಅರ್ಜಿಯನ್ನು ತಿರಸ್ಕರಿಸಿ, ಶರಣಾಗುವಂತೆ ಸೂಚಿಸಿತ್ತು.
ಮದುವೆಯಾಗುವುದಾಗಿ ಭರವಸೆ ನೀಡಿದ ರಾಕೇಶ್ ರಾಥೋಡ್, ಕಳೆದ ನಾಲ್ಕು ವರ್ಷಗಳಿಂದ ತನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಅಲ್ಲದೇ ಕರೆ ವಿವರ ಹಾಗೂ ಕರೆ ರೆಕಾರ್ಡಿಂಗ್‌ಗಳನ್ನು ಸಹ ಪೊಲೀಸರಿಗೆ ನೀಡಿದ್ದಾರೆ.
ಕಳೆದ ವಾರ, ಮಹಿಳೆಯ ಪತಿ ಕೂಡ ಐವರ ವಿರುದ್ಧ ಪ್ರತ್ಯೇಕ ದೂರು ದಾಖಲಿಸಿದ್ದಾರೆ. ರಾಥೋಡ್ ಮತ್ತು ಅವರ ಮಗ ದೂರು ವಾಪಸ್ ಪಡೆಯುವಂತೆ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.