ಖುಂಟಿ: ಜಿಲ್ಲೆಯಲ್ಲಿ ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಕಾನೂನಿನ ಸಂಘರ್ಷಕ್ಕೆ ಒಳಗಾದ 18 ಬಾಲಕರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಬಾಲಕಿಯರನ್ನು ಸೋಮವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ರಾನಿಯಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಐವರು ಬಾಲಕಿಯರು ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಖುಂಟಿ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.
ಐವರು ಬಾಲಕಿಯರ ಪೈಕಿ 12ರಿಂದ 16 ವರ್ಷದ ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ.
12ರಿಂದ 17 ವರ್ಷದೊಳಗಿನ ಬಾಲಕರು ಈ ದುಷ್ಕೃತ್ಯ ಎಸಗಿದ್ದು, ಇವರನ್ನು ಮಕ್ಕಳ ಮಂದಿರದಲ್ಲಿ ಇಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.