ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಕಾರ್ಯಾಚರಣೆ ನಡೆಸಿದ ಪಾಕಿಸ್ತಾನ ಭದ್ರತಾ ಪಡೆಗಳು ಕನಿಷ್ಠ 7 ಮಂದಿ ಭಯೋತ್ಪಾದಕರನ್ನು ಹತ್ಯೆಗೈದಿವೆ ಎಂದು ಮಿಲಿಟರಿ ಮಾಧ್ಯಮ ವಿಭಾಗ ತಿಳಿಸಿದೆ.
ಗುಪ್ತಚರ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಲಾಯಿತು ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ದರಬನ್‌ನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಭಯೋತ್ಪಾದಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮತ್ತೊಂದು ಕಾರ್ಯಾಚರಣೆಯಲ್ಲಿ ಮಡ್ಡಿಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ವೇಳೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದವರು ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಪ್ರಕಟಣೆ ತಿಳಿಸಿದೆ.
ಪಾಕಿಸ್ತಾನ್ ಇನ್‌ಸ್ಟಿಟ್ಯೂಟ್ ಫಾರ್ ಕಾನ್ಫ್ಲಿಕ್ಟ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 2025ರ ಜನವರಿಯಲ್ಲಿ ದೇಶದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಗಳ ಸಂಖ್ಯೆ ತೀವ್ರ ಹೆಚ್ಚಳವಾಗಿದೆ. ಹಿಂದಿನ ತಿಂಗಳಿಗೆ(2024ರ ಡಿಸೆಂಬರ್) ಹೋಲಿಸಿದರೆ ಶೇ 42ರಷ್ಟು ಹೆಚ್ಚಾಗಿದೆ.