ಸಿಂಗ್ರೌಲಿ: ನೃತ್ಯ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನೃತ್ಯಗಾರ್ತಿ ಅನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ಅಪಹರಿಸಿದ ಆರೋಪಿಗಳು ಜಿಲ್ಲೆಯಿಂದ ಸುಮಾರು 30 ಕಿ.ಮೀ ದೂರದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.ಗುರುವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
'ನೃತ್ಯ ಪ್ರದರ್ಶನವನ್ನು ಮುಗಿಸಿ, ಮನೆಗೆ ಹಿಂತಿರುಗುತ್ತಿದ್ದ ವೇಳೆ, ಬೈಕ್‌ಗಳಲ್ಲಿ ಬಂದ ಆರು ಮಂದಿ, ನನ್ನನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಾರೆ' ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಅತ್ಯಾಚಾರ ಎಸಗಿದ ಆರೋಪಿಗಳು, ಆಕೆಯನ್ನು ಅರಣ್ಯಪ್ರದೇಶದಲ್ಲಿಯೇ ಬಿಟ್ಟು, ಆಕೆಯ ಮೊಬೈಲ್‌ನನ್ನು ಕಸಿದುಕೊಂಡು ಪರಾರಿಯಾಗಿದ್ದರು. ಗಾಯಗೊಂಡಿದ್ದ ಆಕೆ, ಅಲ್ಲಿನ ಸ್ಥಳೀಯರ ಸಹಾಯ ಪಡೆದು ಮನೆಗೆ ಬಂದಿದ್ದಾರೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತ್ರಸ್ತೆ ನೀಡಿದ ದೂರನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿಲಾಯಿತು. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.