ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಗೊಳಿಸುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಮಂಗಳವಾರ) ಪರಿಶೀಲನಾ ಸಭೆ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಮಹಾನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಈಗಾಗಲೇ ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಹರಿಯಾಣ ಸರ್ಕಾರಗಳೊಂದಿಗೆ ಸಭೆ ನಡೆಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಈ ಕಾಯ್ದೆಗಳನ್ನು ಹೊಸದಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಈ ಮೂರು ಕಾನೂನುಗಳು ಕ್ರಮವಾಗಿ ಬ್ರಿಟಿಷ್ ಕಾಲದಲ್ಲಿ, ಅಂದರೆ 163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ (ಐಪಿಸಿ), 126 ವರ್ಷಗಳ ಹಿಂದಿನ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಜಾರಿಗೆ ಬರಲಿವೆ.