ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕುರಿತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ನೀಡಿರುವ ಹೇಳಿಕೆಗೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವದ ಕುರಿತು ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಗುಡುಗಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಹೇಳಿಕೆ ನೀಡಿದ್ದು, ಕಾಶ್ಮೀರ ಕುರಿತು ಟರ್ಕಿ ಅಧ್ಯಕ್ಷರು ನೀಡಿರುವ ಹೇಳಿಕೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ ಎಂದು ಹೇಳಿದ್ದಾರೆ.
ಭಾರತದ ಆಂತರಿಕ ವಿಷಯಗಳ ಕುರಿತು ಇಂತಹ ಆಕ್ಷೇಪಾರ್ಹ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಈ ಕುರಿತು ಟರ್ಕಿ ದೇಶದ ರಾಯಭಾರಿಯೊಂದಿಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ.
ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವದ ಕುರಿತು ಇಂತಹ ಅನಗತ್ಯ ಹೇಳಿಕೆಗಳು ಸ್ವೀಕಾರಾರ್ಹವಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಕಾಶ್ಮೀರ ನಮ್ಮ ಆಂತರಿಕ ಸಮಸ್ಯೆಯಾಗಿದ್ದು, ಇದರಲ್ಲಿ ಯಾವುದೇ ಮೂರನೇ ವ್ಯಕ್ತಿಗೆ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಳೆದ ವಾರ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರೊಂದಿಗಿನ ಮಾತುಕತೆಯ ನಂತರ ಹೇಳಿಕೆ ನೀಡಿದ್ದ ಟರ್ಕಿ ಅಧ್ಯಕ್ಷ ಎರ್ಡೋಗನ್ ಅವರು, ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಯ ನಿರ್ಣಯದ ಪ್ರಕಾರ ಮಾತುಕತೆಯ ಮೂಲಕ ಮತ್ತು ಕಾಶ್ಮೀರದ ಜನರ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಪರಿಹರಿಸಬೇಕು. ಟರ್ಕಿ ಹಿಂದಿನಂತೆಯೇ ಕಾಶ್ಮೀರದ ಸಹೋದರರೊಂದಿಗೆ ನಿಲ್ಲಲಿದೆ ಎಂದು ಹೇಳಿದ್ದರು.