ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರಾಮಾಣಿಕತೆಯನ್ನು ಪ್ರಶ್ನಿಸಿರುವ ಬಗ್ಗೆ ತಾವು ಆಯೋಗಕ್ಕೆ ಪತ್ರ ಬರೆದಿರುವುದಾಗಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿಗೆ (ಸಿಇಒ) ಮತ್ತೊಂದು ಪತ್ರ ಹಸ್ತಾಂತರಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುವೇಂದು, 'ಅಧಿಕಾರಿಯೊಬ್ಬರು ತಮ್ಮ ಕೆಲಸದ ಭಾಗವಾಗಿ ನಿರ್ದಿಷ್ಟ ಇಲಾಖೆ ಅಥವಾ ಸಚಿವಾಲಯದಲ್ಲಿ ಕೆಲಸ ಮಾಡಿದ್ದರೆ ಅವರ ಪ್ರಾಮಾಣಿಕತೆಯನ್ನು ಪ್ರಶ್ನಿಸುವಂತಿಲ್ಲ. ಹೆಚ್ಚುವರಿ ಚುನಾವಣಾ ಅಧಿಕಾರಿಗಳು ಮತ್ತು ಇತರ ಚುನಾವಣಾ ಅಧಿಕಾರಿಗಳ ಪ್ರಾಮಾಣಿಕತೆಯ ಬಗ್ಗೆ ಮುಖ್ಯಮಂತ್ರಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ' ಎಂದು ಹೇಳಿದರು.
'ಅವರು (ಬ್ಯಾನರ್ಜಿ) ರಾಜ್ಯದ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಈಗ ಪಾರದರ್ಶಕ ರೀತಿಯಲ್ಲಿ ಮಾಡಲಾದ ಸಿಇಸಿ ನೇಮಕವನ್ನು ಪ್ರಶ್ನಿಸುತ್ತಿದ್ದಾರೆ' ಎಂದು ಟೀಕಿಸಿದರು.
'ಮತದಾರರ ಪಟ್ಟಿಯಲ್ಲಿ ಸುಮಾರು 16 ಲಕ್ಷ ಮತದಾರರು ಹೆಸರುಗಳನ್ನು ಎರಡೆರಡು ಬಾರಿ ನಮೂದಿಸಲಾಗಿದೆ. ದೇಶಕ್ಕೆ ಅಕ್ರಮವಾಗಿ ನುಸುಳಿ ಬಂದಿರುವವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸುವಲ್ಲಿ ಆಡಳಿತಾರೂಢ ಟಿಎಂಸಿ ಪ್ರಮುಖ ಪಾತ್ರ ವಹಿಸಿದೆ' ಎಂದು ಅವರು ಆರೋಪಿಸಿದರು.
ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರನ್ನು ನೇಮಿಸಿರುವುದಕ್ಕೆ ಮಮತಾ ಬ್ಯಾನರ್ಜಿ ಅವರು ಗುರುವಾರ ಟಿಎಂಸಿ ರಾಜ್ಯ ಸಮಾವೇಶದಲ್ಲಿ ಕಳವಳ ವ್ಯಕ್ತಪಡಿಸಿದ್ದರು.