ತಿರುವನಂತಪುರಂ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತನ್ನ ನಾಲ್ಕನೇ ವಾರ್ಷಿಕೋತ್ಸವ ಆಚರಣೆಯನ್ನು ವಿಶಿಷ್ಟವಾಗಿ ನಡೆಸಲು ನಿರ್ಧರಿಸಿದೆ.
ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ನಿರಂತರ ಪ್ರತಿಭಟನೆಗಳು ಮತ್ತು ಹಣದ ಕೊರತೆಯಿಂದಾಗಿ ಅಭಿವೃದ್ಧಿ ಚಟುವಟಿಕೆಗಳು ಸ್ಥಗಿತಗೊಂಡಿರುವ ಸಂದರ್ಭದಲ್ಲಿ ಈ ಆಚರಣೆಯನ್ನು ಏಕೆ ಆಯೋಜಿಸಲಾಗುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಆಚರಣೆಯನ್ನು ನಡೆಸಲು ಸಚಿವ ಸಂಪುಟ ನಿರ್ಧರಿಸಿದೆ. ಸ್ಥಳೀಯಾಡಳಿತ ಮಟ್ಟದಿಂದ ಜಿಲ್ಲಾ ಮತ್ತು ರಾಜ್ಯ ಮಟ್ಟದವರೆಗೆ ವ್ಯಾಪಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲೆಗಳಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಯವರ ಕಾರ್ಯಕ್ರಮಗಳು ಏಪ್ರಿಲ್ 21 ರಂದು ಕಾಸರಗೋಡಿನಲ್ಲಿ ಪ್ರಾರಂಭವಾಗಿ ಮೇ 21 ರಂದು ತಿರುವನಂತಪುರದಲ್ಲಿ ಸಮಾಪ್ತಿಯಾಗಲಿವೆ. ಎಂದಿನಂತೆ, ಈ ಬಾರಿಯೂ ವಿವಿಧ ಸವಲತ್ತುಗಳನ್ನು ಪಡೆದ ಫಲಾನುಭವಿಗಳು ಮತ್ತು ಪ್ರಮುಖ ವ್ಯಕ್ತಿಗಳ ಸಭೆಯನ್ನು ಆಯೋಜಿಸಲಾಗುತ್ತಿದೆ. ಸರ್ಕಾರದ ಅಭಿವೃದ್ಧಿ ಮತ್ತು ಕಲ್ಯಾಣ ಚಟುವಟಿಕೆಗಳು ಮತ್ತು ಸಾಧನೆಗಳನ್ನು ಪ್ರದರ್ಶಿಸುವ ಜಿಲ್ಲಾ ಮಟ್ಟದ ಪ್ರದರ್ಶನ ಮತ್ತು ಮಾರುಕಟ್ಟೆ ಮೇಳವು ವಾರಪೂರ್ತಿ ನಡೆಯಲಿದೆ.
ಇದಲ್ಲದೆ, ರಾಜ್ಯ ಮಟ್ಟದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುವುದು. ಯುವಜನ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಯುವಕರು, ಮಹಿಳಾ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಮಹಿಳೆಯರು, ಎಸ್‍ಸಿ/ಎಸ್‍ಟಿ ಇಲಾಖೆಯ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುಂಪುಗಳು, ಸಂಸ್ಕøತಿ ಇಲಾಖೆಯ ನೇತೃತ್ವದಲ್ಲಿ ಸಾಂಸ್ಕೃತಿಕ ಕ್ಷೇತ್ರದ ಜನರು, ಉನ್ನತ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳ ನೇತೃತ್ವದಲ್ಲಿ ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ವೃತ್ತಿಪರ ವಿದ್ಯಾರ್ಥಿಗಳು ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೇತೃತ್ವದಲ್ಲಿ ವೃತ್ತಿಪರರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.