ನವದೆಹಲಿ: ದೇಶದಲ್ಲಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಹೊರತಾದ ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ಕಲ್ಪಿಸಲು ಕಾನೂನು ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಪಕ್ಷವು, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ, ಉಳಿದೆಲ್ಲ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ವಿಧಿ 15(5) ಅನ್ನು ಜಾರಿಗೊಳಿಸಬೇಕು ಎಂಬ ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸನ್ನು ಉಲ್ಲೇಖಿಸಿದ್ದಾರೆ.
2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ 'ನ್ಯಾಯ ಪತ್ರ'ದಲ್ಲಿ (ಚುನಾವಣಾ ಪ್ರಣಾಳಿಕೆ) ತಾನು ಅಧಿಕಾರಕ್ಕೆ ಬಂದಲ್ಲಿ, ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಮೀಸಲಾತಿ ಕಲ್ಪಿಸುವ ಈ ಕಾನೂನು ರೂಪಿಸುವುದಾಗಿ ಘೋಷಿಸಿತ್ತು. ಅದನ್ನು ಜಾರಿಗೆ ತರಬೇಕು ಎಂಬುದು ಕಾಂಗ್ರೆಸ್ ಒತ್ತಾಯ ಎಂದು ಅವರು ಹೇಳಿದ್ದಾರೆ.
ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಅಖಿಲ ಭಾರತ ಸಮೀಕ್ಷೆ (ಎಐಎಸ್‌ಎಚ್‌ಇ) ಮೂಲಕ ಸಂಗ್ರಹಿಸಲಾದ ದತ್ತಾಂಶ ಮತ್ತು ಬೆಂಗಳೂರಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಖಾಸಗಿ ವಿಶ್ವವಿದ್ಯಾಲಯಗಳು ನೀಡಿದ ದತ್ತಾಂಶದ ಪ್ರಕಾರ, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಸಮುದಾಯದ ವಿದ್ಯಾರ್ಥಿಗಳ ಪ್ರಾತಿನಿಧ್ಯ ಕಡಿಮೆ ಪ್ರಮಾಣದಲ್ಲಿದೆ ಎಂದು ಸಂಸದೀಯ ಸ್ಥಾಯಿ ಸಮಿತಿ ವರದಿ ಹೇಳಿದೆ.