ನವದೆಹಲಿ: ಭಯೋತ್ಪಾದನೆಯ ವಿರುದ್ಧ ಕೇಂದ್ರ ಸರ್ಕಾರ ಶೂನ್ಯ ಸಹಿಷ್ಣುತಾ ನೀತಿಯನ್ನು ಹೊಂದಿದೆ. 2026ರ ಮಾರ್ಚ್ ವೇಳೆಗೆ ದೇಶದಲ್ಲಿ ಭಯೋತ್ಪಾದನೆ ಕೊನೆಗೊಳ್ಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಗೃಹ ಸಚಿವಾಲಯದ ಕಾರ್ಯವೈಖರಿಯ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಅವರು, 'ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದ 370ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಮೂಲಕ ಸಂವಿಧಾನ ಶಿಲ್ಪಿಗಳ ಕನಸನ್ನು ನನಸಾಗಿಸಿದೆ' ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದನೆ, ಎಡಪಂಥೀಯ ಉಗ್ರವಾದ ಮತ್ತು ಈಶಾನ್ಯ ಪ್ರದೇಶಗಳ ದಂಗೆ ದೇಶಕ್ಕೆ ದೊಡ್ಡ ಸವಾಲುಗಳಾಗಿವೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
'ಭಯೋತ್ಪಾದನೆಯ ವಿರುದ್ಧ ಮೋದಿ ಸರ್ಕಾರ ಶೂನ್ಯ ಸಹಿಷ್ಣುತಾ ನೀತಿಯನ್ನು ಹೊಂದಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆಗಳಲ್ಲಿ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಸಾವಿನ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. 2026ರ ಮಾರ್ಚ್ ವೇಳೆಗೆ ದೇಶದಲ್ಲಿ ಭಯೋತ್ಪಾದನೆ ಕೊನೆಗೊಳ್ಳುತ್ತದೆ' ಎಂದು ಅವರು ತಿಳಿಸಿದ್ದಾರೆ.