ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಮೋದಿ ಸರ್ಕಾರ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಕನಿಷ್ಠ ಮಟ್ಟಕ್ಕೆ ಕುಸಿದಿವೆ.ಆದರೆ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಕಡಿಮೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಚ್ಚಾ ತೈಲ ಬೆಲೆ ನಿರಂತರವಾಗಿ ಕುಸಿಯುತ್ತಿದೆ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏಕೆ ಕಡಿಮೆ ಆಗಿಲ್ಲ?, ಮೋದಿ ಸರ್ಕಾರ ಜನರನ್ನು ನಿರ್ಭಯವಾಗಿ ದೋಚುತ್ತಿದೆ ಎಂದು ಖರ್ಗೆ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವು ಏಕಪಕ್ಷೀಯವಾಗಿದೆ. ಆದರೆ ಜನರು ಹಣದುಬ್ಬರದಿಂದಾಗಿ ತತ್ತರಿಸಿದ್ದಾರೆ, ಕಣ್ಣೀರು ಸುರಿಸುತ್ತಿದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ
ಕಚ್ಚಾ ತೈಲದ ಬೆಲೆಯಲ್ಲಿ ಶೇ. 34ರಷ್ಟು ಕುಸಿದಿದೆ. ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಸುಮಾರು ₹36 ಲಕ್ಷ ಕೋಟಿ ದೋಚಿದೆ. ಹೀಗೆ ಆದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಾವಾಗ ಕಡಿಮೆಯಾಗುತ್ತದೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.