ಲಖನೌ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಲಖನೌ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದಿ ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತ ವ್ಯಕ್ತಿಯನ್ನು ರಾಘವೇಂದ್ರ ಬಾಜಪೈ ಎಂದು ಗುರುತಿಸಲಾಗಿದೆ.
ಶನಿವಾರ ಸಂಜೆ ಬಾಜಪೈ ಅವರು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆಗೈದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣ ಸಂಬಂಧಿಸಿ ಕಂದಾಯ ಅಧಿಕಾರಿಗಳು ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಹಿಂದಿನ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಕೊಲೆಗಾರರ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಿ.ಸಿ.ಟಿ.ವಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ಕೊಲೆ ವಿರುದ್ಧ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತಿದ್ದಾರೆ.