ಕಾಕಿನಾಡ: 'ಕಳಪೆ ಶೈಕ್ಷಣಿಕ ಸಾಧನೆಗಾಗಿ' 37 ವರ್ಷದ ಒಎನ್‌ಜಿಸಿ ಉದ್ಯೋಗಿಯೊಬ್ಬರು ತನ್ನ ಇಬ್ಬರು ಅಪ್ರಾಪ್ತ ಪುತ್ರರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ನಿರಾಸೆಗೊಂಡಿದ್ದ ತಂದೆ ವಿ. ಚಂದ್ರ ಕಿಶೋರ್ ಬಕೆಟ್ ನೀರಿನಲ್ಲಿ ಮುಳುಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಧ್ಯಯನದಲ್ಲಿ ಅತ್ಯುತ್ತಮವಾಗಿಲ್ಲದಿದ್ದರೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ತುಂಬಾ ಕಷ್ಟಪಡಬೇಕಾಗುತ್ತದೆ ಎಂಬ ಹೆದರಿಕೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಧಿಕಾರಿಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಸೂಸೈಡ್ ನೋಟ್ ವಶಕ್ಕೆ ಪಡೆಯಲಾಗಿದ್ದು, ಅದರಲ್ಲಿನ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ. ಈ ದುರಂತಕ್ಕೆ ಕಾರಣವಾದ ನಿಖರವಾದ ಕಾರಣ ಪತ್ತೆ ಹಚ್ಚಲು ವಿಧಿವಿಜ್ಞಾನ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿ ಹೇಳಿದರು.
ತಮ್ಮ ಪತಿ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ, ಅವರ ಮಕ್ಕಳು ಬಕೆಟ್‌ನಲ್ಲಿ ಸಾವನ್ನಪ್ಪಿರುವುದಾಗಿ ಕಿಶೋರ್ ಅವರ ಪತ್ನಿ ರಾಣಿ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.