ಜೈಪುರ: ನ್ಯಾಷನಲ್ ಹೆರಾಲ್ಡ್ ಪ್ರಕರಣವು ಕಾನೂನು ವಿಷಯವಲ್ಲ, ಬದಲಾಗಿ ರಾಜಕೀಯ ಪಿತೂರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್ ಹೇಳಿದ್ದಾರೆ.
ವಿರೋಧ ಪಕ್ಷದ ಧ್ವನಿಯ್ನನು ಹತ್ತಿಕ್ಕಲು ಪ್ರಮುಖ ವಿಷಯಗಳಿಂದ ಜನರ ಗಮನ ಬೇರೆಡೆಗೆ ತಿರುಗಿಸಲು ಕೇಂದ್ರ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯವನ್ನು ಆಡಳಿತಾರೂಢ ಬಿಜೆಪಿ ಆಯುಧವನ್ನಾಗಿ ಬಳಸುತ್ತಿದೆ. ಗಾಂಧಿ ಕುಟುಂಬ ಇರುವವರೆಗೆ ಕಾಂಗ್ರೆಸ್ ಅಸ್ತಿತ್ವದಲ್ಲಿರುತ್ತದೆ ಎಂಬುದನ್ನು ಬಿಜೆಪಿ ಅರಿತುಕೊಂಡಿದೆ' ಎಂದು ಅವರು ತಿಳಿಸಿದ್ದಾರೆ.
ಇ.ಡಿಯಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ದೇಶದ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವುದು ಮತ್ತು ದೇಶದಲ್ಲಿನ ಮೂಲಭೂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವುದು ಬಿಜೆಪಿಯ ಮುಖ್ಯ ಕಾರ್ಯಸೂಚಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.