ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಕ್ಸಲ್ ನಿಗ್ರಹ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ಭುಗಿಲೆದ್ದಿದೆ ಎಂದು ಪೊಲೀಸ್ ಮಹಾನಿರ್ದೇಶಕ ಸುಂದರರಾಜ್ ಪಿ ತಿಳಿಸಿದ್ದಾರೆ.
ಛತ್ತೀಸಗಢ ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಕೋಬ್ರಾದ 202 ಹಾಗೂ 210ನೇ ಬೆಟಾಲಿಯನ್‌ಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.
ಘಟನಾ ಸ್ಥಳದಿಂದ ನಕ್ಸಲರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.
ಈ ವರ್ಷ ರಾಜ್ಯದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಈವರೆಗೆ 138 ನಕ್ಸಲರು ಹತ್ಯೆಗೀಡಾಗಿದ್ದಾರೆ. ಈ ಪೈಕಿ ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ 122 ನಕ್ಸಲರನ್ನು ಹತ್ಯೆಗೈಯಲಾಗಿದೆ.