ಲಖನೌ: ವಕ್ಫ್ (ತಿದ್ದುಪಡಿ) ಮಸೂದೆ 2025, ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹಾರಿಸುತ್ತದೆ. ಭೂಮಿ ಅತಿಕ್ರಮಣ ಹಾಗೂ ಭ್ರಷ್ಟಾಚಾರವನ್ನು ತೊಡೆದುಹಾಕುವ ನಿಟ್ಟಿನಲ್ಲಿ ಈ ತಿದ್ದುಪಡಿ ಮಹತ್ವದ ಹೆಜ್ಜೆಯಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಈ ತಿದ್ದುಪಡಿಯು ದೇಶದ ಸಾರ್ವಭೌಮತ್ವವನ್ನು ಬಲಪಡಿಸುತ್ತದೆ ಮತ್ತು ಜನರ ಕಲ್ಯಾಣಕ್ಕೆ ಸಹಕಾರಿಯಾಗಲಿದೆ ಎಂದೂ ಹೇಳಿದ್ದಾರೆ.
ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರತಿಕ್ರಿಯಿಸಿ, ಈ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ. ಇದೊಂದು ಐತಿಹಾಸಿಕ ನಿರ್ಧಾರ. ಮೋದಿ ಅವರ ನಾಯಕತ್ವದಲ್ಲಿ ಮತ್ತೊಂದು ಪ್ರಮುಖ ಸುಧಾರಣೆಯಾಗಿದೆ. ತಿದ್ದುಪಡಿಯಿಂದಾಗಿ ಬಡ ಮುಸ್ಲಿಂ ಕುಟುಂಬಗಳು ಅತಿದೊಡ್ಡ ಫಲಾನುಭವಿಗಳ ಪಟ್ಟಿಗೆ ಸೇರುತ್ತಾರೆ ಎಂದು ತಿಳಿಸಿದ್ದಾರೆ.
ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿರುವುದು. ರಾಮ ಮಂದಿರ ನಿರ್ಮಾಣ, ತ್ರಿವಳಿ ತಲಾಖ್ ರದ್ದತಿಗೆ ಸೇರಿದಂತೆ ಅನೇಕ ಮಹತ್ತರ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು, ಎಲ್ಲರಿಗೂ ಸಮಾನ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಲಾಗಿದೆ. ಇದು ದೇಶದ ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷಗಳು 'ಮುಸ್ಲಿಂ ವಿರೋಧಿ', 'ಅಸಂವಿಧಾನಿಕ ನಡೆ' ಎಂದು ಭಾರಿ ವಿರೋಧ ವ್ಯಕ್ತಪಡಿಸಿವೆ.